Published on: December 16, 2022

‘ನಮ್ಮ ಕ್ಲಿನಿಕ್‌’

‘ನಮ್ಮ ಕ್ಲಿನಿಕ್‌’

ಸುದ್ದಿಯಲ್ಲಿ ಏಕಿದೆ? ನಗರ ಪ್ರದೇಶದ ಬಡಜನರಿಗಾಗಿ ರಾಜ್ಯ ಸರ್ಕಾರ ಪ್ರಾರಂಭಿಸಿರುವ ರಾಜ್ಯಾದ್ಯಂತ ಕಾರ್ಯನಿರ್ವಹಿಸುವ 114 ನಮ್ಮ ಕ್ಲಿನಿಕ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಉದ್ಘಾಟಿಸಿದರು

ಮುಖ್ಯಾಂಶಗಳು

  • ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಜನವರಿ ಅಂತ್ಯಕ್ಕೆ ಎಲ್ಲವೂ ಕಾರ್ಯನಿರ್ವಹಿಸಲಿವೆ.
  • ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಮಯದಲ್ಲಿ 100ಕ್ಕೂ ಹೆಚ್ಚು ಕ್ಲಿನಿಕ್‌ಗಳು ಉದ್ಘಾಟನೆ ಆಗುತ್ತಿರುವುದು ಸಾರ್ವಕಾಲಿಕ ದಾಖಲೆಯಾಗಲಿದೆ
  • ನಮ್ಮ ಕ್ಲಿನಿಕ್‌ಗಳಲ್ಲಿ ತಲಾ ಒಬ್ಬ ವೈದ್ಯಾಧಿಕಾರಿ, ನರ್ಸಿಂಗ್‌ ಸ್ಟಾಫ್‌, ಲ್ಯಾಬ್‌ ಟೆಕ್ನಿಷಿಯನ್‌, ಡಿ ದರ್ಜೆ ನೌಕರರು ಇಲ್ಲಿ ಇರಲಿದ್ದು 12 ರೀತಿಯ ಆರೋಗ್ಯ ಸೇವೆಗಳು ಲಭ್ಯವಿರಲಿವೆ
  • ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 243 ನಮ್ಮ ಕ್ಲಿನಿಕ್ಗಳು ಕಾರ್ಯಚರಣೆ ಮಾಡಲಿವೆ.
  • 10 ರಿಂದ 20 ಸಾವಿರ ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್ಗಳು ಆರಂಭವಾಗಲಿದೆ.
  • ಕೆಲವೆಡೆ ವೈದ್ಯರ ಕೊರತೆ ಇದೆ. ಅಂತಹ ಕಡೆ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ 80-100 ವೈದ್ಯರನ್ನು ಅಲ್ಲಿಗೆ ನೇಮಿಸಲಾಗಿದೆ.

ಉದ್ದೇಶ

ಈ ಕ್ಲಿನಿಕ್ಗಳಿಂದ ದುರ್ಬಲ ವರ್ಗದವರಿಗೆ, ಶ್ರಮಕರಿಗೆ, ಕೂಲಿ ಕಾರ್ಮಿಕರಿಗೆ ಸೇರಿದಂತೆ ಹಲವರಿಗೆ ಆರೋಗ್ಯ ಸೇವೆ ಸಿಗಲಿದೆ. ಬಡಾವಣೆಯ ವ್ಯಾಪ್ತಿಯಲ್ಲಿ ಈ ಕ್ಲಿನಿಕ್‌ಗಳು ತಲೆ ಎತ್ತುವುದರಿಂದ ಸುಲಭವಾಗಿ ಆರೋಗ್ಯ ಸೇವೆ ಸಿಗಲಿದೆ.

12 ರೀತಿಯ ಸೇವೆಗಳು

ನಮ್ಮ ಕ್ಲಿನಿಕ್‌ಗಳಲ್ಲಿ 12 ರೀತಿಯ ಆರೋಗ್ಯ ಸೇವೆಗಳು ಲಭ್ಯ ಇರಲಿದೆ. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಶಿಶುವಿನ ಸಮಗ್ರ ಆರೈಕೆ, ಬಾಲ್ಯ ಮತ್ತು ಹದಿಹರಯದವರಿಗೆ ಸೇವೆಗಳು, ಸಾರ್ವತ್ರಿಕ ಲಸಿಕಾಕರಣದ ಸೇವೆಗಳು, ಕುಟುಂಬ ಕಲ್ಯಾಣ ಗರ್ಭ ನಿರೋಧಕ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಕಾಯಿಲೆಗಳಿಗೆ ಸೇವೆ, ಮಧುಮೇಹ, ರಕ್ತದೊತ್ತಡಕ್ಕೆ ಚಿಕಿತ್ಸೆ , ಸಕ್ಕರೆ ಕಾಯಿಲೆ, ದೀರ್ಘಾವಧಿ ಕಾಯಿಲೆಗಳು, ಬಾಯಿ, ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್‌, ಬಾಯಿಯ ಆರೋಗ್ಯ ಸಮಸ್ಯೆಗಳು ಮತ್ತು ಸೇವೆಗಳು, ಕಣ್ಣಿನ ತಪಾಸಣೆ, ಮೆಂಟಲ್‌ ಹೆಲ್ತ್‌ಗೆ ಸಂಬಂಧಿಸಿದ ಮೂಲಭೂತ ಸೇವೆಗಳು ಸೇರಿದಂತೆ ಬೇರೆ ಆಸ್ಪತ್ರೆಗಳಿಗೆ ರೆಫರಲ್‌ ಸೇವೆಗಳು ಇಲ್ಲಿ ಲಭ್ಯವಾಗಲಿದೆ.

ಉಚಿತ ಔಷಧಿ ಮತ್ತು ಸೇವೆಗಳು 

ವೃದ್ಧಾಪ್ಯ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಔಷಧಗಳು ಸಂಪೂರ್ಣ ಉಚಿತವಾಗಿರಲಿದೆ. 14 ಪ್ರಯೋಗ ಶಾಲಾ ಪರೀಕ್ಷೆಗಳು ಇಲ್ಲಿ ಲಭ್ಯವಿದ್ದು ಟೆಲಿ ಕನ್ಸಲ್ಟೇಷನ್‌ ಸರ್ವೀಸಸ್‌, ಕ್ಷೇಮ ಚಟುವಟಿಕೆಗಳು ಕೂಡ ಉಚಿತವಾಗಿವೆ.